ನವದೆಹಲಿ: ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
"ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು ನವೆಂಬರ್ 9, 22 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಡಾ. ಜಸ್ಟಿಸ್ ಡಿವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ" ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮಾಡಿದ್ದಾರೆ.
ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ತಮ್ಮ ಉತ್ತರಾಧಿಕಾರಿ ಮತ್ತು ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ನೇಮಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು.
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಚಂದ್ರಚೂಡ್ ಅವರು ಸಿಜೆಐ ಆಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ವೈವಿ ಚಂದ್ರಚೂಡ್ ಅವರ ಪುತ್ರರಾಗಿದ್ದು, ಅವರು ನವೆಂಬರ್ 10, 2024ರ ವರೆಗೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.