ಮುಂಬೈ: ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಎಚ್. ಗ್ವಾಲಾನಿ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ದೇಶಮುಖ್ ಅವರಿಗೆ ಈಚೆಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಎನ್‌ಸಿಪಿ ಮುಖಂಡರಾದ ದೇಶಮುಖ್ ಅವರನ್ನು 2021ರ ನವೆಂಬರ್ 2ರಂದು ಬಂಧಿಸಲಾಗಿತ್ತು. ಅನಂತರ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಧಮನಿಯ ಆಂಜಿಯೋಗ್ರಫಿಗಾಗಿ ಅವರನ್ನು ಕಳೆದ ವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.