ಪ್ರಯಾಗ್‌ರಾಜ್: ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಗೆ ನೀಡಿದ್ದ ತಡೆಯಾಜ್ಞೆಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ವಾರಣಾಸಿ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಕ್ಕೆ ಅಕ್ಟೋಬರ್ 18 ರಂದು ಹೈಕೋರ್ಟ್ ತಡೆ ನೀಡಿತ್ತು. ಅದನ್ನು ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ ಅವರು ನವೆಂಬರ್ 30 ರವರೆಗೆ ವಿಸ್ತರಿಸಿದ್ದಾರೆ.
ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಎಎಸ್‌ಐ ಸಿದ್ಧವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ 1991 ರಲ್ಲಿ ಸಲ್ಲಿಸಲಾದ ಮೂಲ ದಾವೆಯ ವಿಚಾರಣೆ ಪ್ರಶ್ನಿಸಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್, ವಾರಣಾಸಿಯ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಾಡಿಯಾ ಅವರು, ತಡೆಯಾಜ್ಞೆ ವಿಸ್ತರಿಸಿ, ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿದ್ದಾರೆ.