ನವದೆಹಲಿ: ಕಳೆದ ಬಾರಿ ಜಮ್ಮು ಕಾಶ್ಮೀರದ ನೌಷೇರಾ ಗಡಿಯಲ್ಲಿ ದೇಶ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಆಚರಿಸಲು ನಿರ್ಧರಿಸಿದ್ದಾರೆ.
ಪ್ರಧಾನಿ ಮೋದಿ ಅವರು ಅಕ್ಟೋಬರ್ 21 ರಂದು ಕೇದಾರನಾಥ ಮತ್ತು ಬದರಿನಾಥ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಮೊದಲು ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಪೂಜೆ ಸಲ್ಲಿಸಿ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ನಂತರ ಬದರಿನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಬದರಿನಾಥ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಕೈಗೊಂಡಿರುವ ಯೋಜನೆಗಳ ಪರಿಶೀಲನೆ ನಡೆಸಲಿದ್ದಾರೆ. ಅಕ್ಟೋಬರ್ 24 ರಂದು ದೀಪಾವಳಿಯ ದಿನದಂದು ಪ್ರಧಾನಿ ಮೋದಿ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಮೋದಿ ಪ್ರಧಾನಿಯಾದ ನಂತರ ಪ್ರತಿ ವರ್ಷವೂ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರು ಗಡಿ ಗ್ರಾಮವಾದ ಮಾನಾಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಗ್ರಾಮಸ್ಥರು ಮತ್ತು ಸೈನಿಕರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.