ನವದೆಹಲಿ: ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಹೊಂದಿರುವ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಪ್ರಕಟಿಸಬೇಕು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಅಭಯ್ ಎಸ್. ಓಕಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿದಾರರು ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದು. ನಾವು ಈ ಅರ್ಜಿಯನ್ನು ವಜಾಗೊಳಿಸಿದ್ದೇವೆ ಎಂದು ಹೇಳಿದೆ.
'ಚುನಾವಣೆ ನಿಲ್ಲುವ ಪ್ರತಿ ರಾಜಕಾರಣಿಯೂ ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿವರಗಳನ್ನು ಪ್ರಕಟಿಸುವುದನ್ನು ಖಚಿತಪಡಿಸಿಕೊಳ್ಳಲು, ಒಂದು ವೇಳೆ ಪ್ರಕಟಿಸದಿದ್ದರೆ ಅಂತಹ ಪಕ್ಷದ ಅಧ್ಯಕ್ಷರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು' ಎಂದು ಕೋರಿ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು.