ನವದೆಹಲಿ: ಮೇಲ್ವರ್ಗಗಳಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ.
'ಜನಹಿತ ಅಭಿಯಾನ' ಸ್ವಯಂ ಸೇವಾ ಸಂಸ್ಥೆ (ಎನ್‌ಜಿಒ) ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಒಟ್ಟು 7 ದಿನಗಳ ಕಾಲ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ, ಎಸ್.ರವೀಂದ್ರ ಭಟ್, ಬೇಲಾ ಎಂ.ತ್ರಿವೇದಿ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಸೆಪ್ಟೆಂಬರ್ 27ರಂದು ಈ ಕುರಿತ ತೀರ್ಪು ಕಾಯ್ದಿರಿಸಿತ್ತು.
ಮುಖ್ಯ ನ್ಯಾಯಮೂರ್ತಿ ಲಲಿತ್ ಹಾಗೂ ನ್ಯಾಯಮೂರ್ತಿ ರವೀಂದ್ರ ಭಟ್ ಅವರು ಸೋಮವಾರ ಪ್ರತ್ಯೇಕವಾಗಿ ತೀರ್ಪು ಪ್ರಕಟಿಸಲಿದ್ದಾರೆ' ಎಂದು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.