ಇಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ 600 ಮೆಗಾವ್ಯಾಟ್ ಸಾಮರ್ಥ್ಯದ ಕಮೆಂಗ್ ಜಲವಿದ್ಯುತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶಕ್ಕೆ ಸಮರ್ಪಿಸಿದರು.
ಪಶ್ಚಿಮ ಕಮೆಂಗ್ ಜಿಲ್ಲೆಯ 80 ಚದರ ಕಿಲೋಮೀಟರ್‌ಗಿಂತಲೂ ಅಧಿಕ ಪ್ರದೇಶದಲ್ಲಿ ₹8,450 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಈ ಯೋಜನೆ ಅಭಿವೃದ್ಧಿಪಡಿಸಲಾಗಿದೆ.
ಈ ಯೋಜನೆಯಿಂದ ಅರುಣಾಚಲ ಪ್ರದೇಶಕ್ಕೆ ಅಗತ್ಯವಿರುವುದಕ್ಕಿಂತಲೂ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಆಗಲಿದೆ. ಸ್ಥಿರತೆ ಮತ್ತು ಏಕೀಕರಣದ ದೃಷ್ಟಿಯಿಂದ ರಾಷ್ಟ್ರೀಯ ಗ್ರಿಡ್‌ಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇದರ ಜೊತೆಗೆ, ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಇಟಾನಗರದ ಹೊಲೊಂಗಿಯಲ್ಲಿ ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವಾದ ದೋನಿ ಪೊಲೊ ವಿಮಾನ ನಿಲ್ದಾಣಕ್ಕೆ ಮೋದಿ ಚಾಲನೆ ನೀಡಿದರು. 2019, ಫೆಬ್ರುವರಿಯಲ್ಲಿ ಪ್ರಧಾನಿ ಮೋದಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.