ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಭೂಪೇಶ್ ಬಾಘೇಲ್, ಶಾಸಕ ಸಚಿನ್ ಪೈಲಟ್, ಜಿಗ್ನೇಶ್ ಮೆವಾನಿ, ಕನ್ಹಯ್ಯಾ ಕುಮಾರ್ ಮತ್ತಿತರ 40 ಮಂದಿ ಸ್ಟಾರ್ ಪ್ರಚಾರಕರಾಗಿದ್ದಾರೆ.
ಈ ಪಟ್ಟಿಯಲ್ಲಿ ಕರ್ನಾಟಕದಿಂದ ಬಿ.ಕೆ. ಹರಿಪ್ರಸಾದ್ ಅವರಿಗೂ ಸ್ಥಾನ ನೀಡಲಾಗಿದೆ. ಆದರೆ, ಇತ್ತೀಚಿಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರಿಗೆ ಸ್ಥಾನ ನೀಡಿಲ್ಲ. ಅಲ್ಲದೇ, ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೊರತುಪಡಿಸಿದರೆ ನಂತರದ ಮೂರು ಸ್ಥಾನಗಳಲ್ಲಿ ಗಾಂಧಿ ಕುಟುಂಬದವರೇ ಇರುವುದಕ್ಕೆ ಕೆಲವರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.