ತಿರುವನಂತಪುರಂ: ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಸುಗ್ರೀವಾಜ್ಞೆಯನ್ನು ಸಹಿ ಮಾಡದೇ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ವಾಪಸ್ ಕಳುಹಿಸಿದ್ದಾರೆ.
ಸರ್ಕಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಕಾನೂನು ತರುವುದನ್ನು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಕಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಪ್ರಸ್ತುತ ಎಂದು ಹೇಳಿದ್ದಾರೆ. ಇದೇ ವೇಳೆ ಕೇರಳ ವಿಧಾನಸಭೆಯ ಸಭಾಧ್ಯಕ್ಷರು ಮಾತನಾಡಿ, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿರುವುದು ಅಸ್ವಾಭಾವಿಕವೇನಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬಾರದೆಂಬ ಸ್ಪಷ್ಟ ನಿಲುವು ಹೊಂದಿದ್ದಾರೆ. ಎಲ್ ಡಿ ಎಫ್ ಸರ್ಕಾರಕ್ಕೆ ಕಾರ್ಯಕ್ರಮವೊಂದರಲ್ಲಿ ತಿರುಗೇಟು ನೀಡಿದ್ದ ರಾಜ್ಯಪಾಲರು, ಕುಲಪತಿಗಳ ಹುದ್ದೆ ರಾಜ್ಯ ಸರ್ಕಾರದಿಂದ ಸಿಗುವ ಕೃಪೆಯಲ್ಲ ಎಂದು ಹೇಳಿದ್ದರು.