ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದ್ದು, ನಗರ ಮತ್ತು ಹೊರ ವಲಯದ ಕೆಲ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ವೆಲ್ಲೂರ್ ಸೇರಿದಂತೆ ಉತ್ತರದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚೆನ್ನೈ ಮತ್ತು ತಿರುವಳ್ಳೂರುನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೆ, ಕಾಂಚೀಪುರಂ, ಚೆಂಗಲ್‌ಪಟ್ಟು, ರಾಣಿಪೇಟ್, ವಿಲ್ಲುಪುರಂ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ.
ಚೆನ್ನೈನಲ್ಲಿ ಮಂಗಳವಾರ ವ್ಯಕ್ತಿಯೊಬ್ಬರು ಮಳೆಯಲ್ಲೇ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ನಗರದ ಪುಲಿಯಾಂತೋಪ್‌ನ ವಸತಿ ಕಟ್ಟಡ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಉತ್ತರ ಚೆನ್ನೈನ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ.
ಚೆನ್ನೈನ ನುಂಗಂಬಕ್ಕಂ ಪ್ರದೇಶದಲ್ಲಿ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಒಂದೇ ದಿನದಲ್ಲಿ 8 ಸೆಂ.ಮೀ. ಮಳೆಯಾಗಿದೆ. ಕಳೆದ 72 ವರ್ಷಗಳಲ್ಲಿ ಈ ರೀತಿಯಾಗಿ ಮೂರನೇ ಬಾರಿ ದಾಖಲೆಯ ಮಳೆಯಾಗಿದೆ ಎಂದು ಅಲ್ಲಿನ ಹವಾಮಾನ ಇಲಾಖೆಯ ಉಪ ನಿರ್ದೇಶಕ ಎಸ್. ಬಾಲಚಂದ್ರನ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.