ನವದೆಹಲಿ: ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ನ್ಯಾಯಾಂಗದೊಂದಿಗೆ ನಿಕಟ ಸಂಬಂಧ ಹೊಂದಲು ಸರ್ಕಾರವು ಎಲ್ಲ ರೀತಿಯಿಂದಲೂ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಶನಿವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.
ಚಂದ್ರಚೂಡ್ ಅವರ ಸಮ್ಮುಖದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಪ್ರಧಾನಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಾವು ಸರ್ಕಾರದ ಕಡೆಯಿಂದ ತಂಡವಾಗಿ ಕೆಲಸ ಮಾಡುತ್ತೇವೆ' ಎಂದರು.
'ಈ ಹಿಂದಿನ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ. ರಮಣ ಮತ್ತು ಯು.ಯು. ಲಲಿತ್ ಹಾಗೂ ಈಗಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳೊಂದಿಗೆ ಅತ್ಯಂತ ಸೌಹಾರ್ದಯುತ ಸಂಬಂಧವನ್ನು ಹೊಂದಿರುವುವುದು ನನ್ನ ಅದೃಷ್ಟ' ಎಂದೂ ರಿಜಿಜು ಹೇಳಿದ್ದಾರೆ.
ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಬಳಸುವುದನ್ನು ಪ್ರೋತ್ಸಾಹಿಸುವ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರು. ಅದಕ್ಕೆ ತಕ್ಕಂತೆ ಈಗ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಅವರ ನೇತೃತ್ವದಲ್ಲಿ ಎಲ್ಲ ಭಾರತೀಯ ಭಾಷೆಗಳಲ್ಲಿ ಹತ್ತಿರವಾಗುವ 'ಸಾಮಾನ್ಯ ಮೂಲ ಶಬ್ದಕೋಶ'ವನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.