ಪೋರ್ಟ್ ಬ್ಲೇರ್: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಡಮಾನ್ ಮತ್ತು ನಿಕೋಬಾರ್ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ಜಿತೇಂದ್ರ ನರೈನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ಥಳೀಯ ಕೋರ್ಟ್ ಗುರುವಾರ ತಿರಸ್ಕರಿಸಿದ್ದು, ಇದರ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಆರೋಪಿ ಹಿರಿಯ ಐಎಎಸ್ ಅಧಿಕಾರಿಯನ್ನು ಬಂಧಿಸಿದೆ.
ರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ನಂತರ, ಪೊಲೀಸರ ತಂಡ ನರೈನ್ ತಂಗಿರುವ ಖಾಸಗಿ ರೆಸಾರ್ಟ್‌ಗೆ ತೆರಳಿ, ಭಾರೀ ಭದ್ರತೆಯ ನಡುವೆ ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಹಿರಿಯ ಐಎಎಸ್ ಅಧಿಕಾರಿ ನರೈನ್ ಅವರನ್ನು ಈ ಹಿಂದೆ ಮೂರು ಬಾರಿ ವಿಚಾರಣೆ ನಡೆಸಿದ್ದು, ಈಗ ಬಂಧಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ 21 ವರ್ಷದ ಮಹಿಳೆಗೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಮುಖ್ಯ ಕಾರ್ಯದರ್ಶಿಯ ಮನೆಗೆ ಕರೆದೊಯ್ದು, ನಂತರ ಅಲ್ಲಿ ನರೈನ್ ಸೇರಿದಂತೆ ಇತರೆ ಉನ್ನತ ಅಧಿಕಾರಿಗಳು ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಎಸ್‌ಐಟಿ ರಚಿಸಲಾಗಿದೆ.
ನರೈನ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅವರ ವಕೀಲ ದೀಪ್ ಕಬೀರ್ ಅವರು ಅರ್ಜಿ ಸಲ್ಲಿಸಿದ್ದರು. ಮಾಜಿ ಮುಖ್ಯ ಕಾರ್ಯದರ್ಶಿ ತನಿಖೆಗೆ ಸಹಕರಿಸುತ್ತಿದ್ದು, ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.