ನವದೆಹಲಿ: ಇತರೆ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನ ಯೋಜನೆಯನ್ನು ಸರ್ಕಾರ ಸೀಮಿತಗೊಳಿಸಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ 8ನೇ ತರಗತಿಯವರೆಗೆ ಮಾತ್ರವೇ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯಲಿದೆ ಎಂದೂ ಪ್ರತಿಪಾದಿಸಿದೆ.
ಇದಕ್ಕೂ ಮೊದಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ದೊರೆಯುತ್ತಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ.
ಈ ಕುರಿತ ಹೇಳಿಕೆಯಲ್ಲಿ ಕೇಂದ್ರ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಶಿಕ್ಷಣ ಹಕ್ಕು ಕಾಯ್ದೆ 2009ರ ಅನ್ವಯ ಪ್ರತಿ ಮಗುವಿಗೂ 1 ರಿಂದ 8ನೇ ತರಗತಿವರೆಗೂ ಮಾತ್ರ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದಿದೆ.
ಅದರಂತೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೇಂದ್ರ ಬುಡಕಟ್ಟು ವ್ಯವಹಾರಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಅನುಕೂಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಸಿಗಲಿದೆ. ಅದರಂತೆ 2022-23ನೇ ಸಾಲಿನಲ್ಲಿ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನದ ಅನುಕೂಲವೂ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಕೇವಲ 9 ಮತ್ತು 10ನೇ ತರಗತಿಗಳಿಗೆ ಮಾತ್ರ ಅರ್ಜಿಗಳನ್ನು ಪರಿಶೀಲಿಸಬೇಕು ಮತ್ತು ರಾಜ್ಯ, ಜಿಲ್ಲಾ ನೋಡಲ್ ಅಧಿಕಾರಿಗಳಿಗೂ ಸೂಚಿಸಿದೆ. ಈ ತೀರ್ಮಾನಕ್ಕೆ ರಾಜಕೀಯ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಕಾಂಗ್ರೆಸ್ ಪಕ್ಷದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ದಶಕಗಳಿಂದ ಎಸ್‌ಸಿ., ಎಸ್‌ಟಿ.,ಯ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುತ್ತಿದ್ದರು. 2022-23ನೇ ಸಾಲಿನಿಂದ ಸ್ಥಗಿತಗೊಳಿಸಿರುವುದು ಬಡವಿದ್ಯಾರ್ಥಿಗಳ ವಿರುದ್ಧದ ಸಂಚಿನ ಭಾಗವಾಗಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಕಳೆದ ಎಂಟು ವರ್ಷಗಳಿಂದ ಇದನ್ನೇ ಮಾಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಜೆಟ್‌ನಲ್ಲಿ ಕಡಿತ ಮಾಡಿದೆ. ಈಗ ಈ ಕ್ರಮಕ್ಕೆ ಮುಂದಾಗಿದೆ. ಇದನ್ನು ನಾವು ಒಪ್ಪುವುದಿಲ್ಲ. ಇದರ ವಿರುದ್ಧ ಹೋರಾಟ ನಡೆಸಲಿದ್ದೇವೆ. ಸರ್ಕಾರ ಕೂಡಲೇ ಈ ತೀರ್ಮಾನವನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಬಿಎಸ್‌ಪಿ ನಾಯಕ ಕುನ್ವರ್ ಡ್ಯಾನಿಶ್ ಅಲಿ ಅವರು, ಬಡವರ್ಗದ ಮಕ್ಕಳನ್ನು ಶಿಕ್ಷಣದಿಂದ ಹೊರಗಿಡಲು ಕೇಂದ್ರ ಸರ್ಕಾರ ಹೊಸ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಶಿಕ್ಷಣ ಪಡೆದ ಮಕ್ಕಳು ಯಾವುದೇ ಸಮುದಾಯದವರಿರಲಿ, ದೇಶವನ್ನು ಅಭಿವೃದ್ಧಿಯತ್ತ ಒಯ್ಯುತ್ತಾರೆ ಎಂಬಬುದನ್ನು ಮರೆಯಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.