ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿ.ಡಿ. ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಲಾಗಿದೆ.
ಅಂತಹದ್ದೇ ಹೇಳಿಕೆಗಳನ್ನು ನೀಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೊಲೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ರಂಜಿತ್ ಸಾವರ್ಕರ್ ದೂರಿನಲ್ಲಿ ಆಗ್ರಹಿಸಿದ್ದಾರೆ.
ಆದರೆ ಇದುವರೆಗೆ ಎಫ್‌ಐಆರ್ ದಾಖಲಿಸಲಾಗಿಲ್ಲ ಎಂದು ಅಧಿಕೃತ ಪೊಲೀಸ್ ಮೂಲಗಳು ಹೇಳಿವೆ.
ಭಾರತ್ ಜೋಡೊ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಾವರ್ಕರ್ ವಿರುದ್ಧ ಟೀಕಿಸಿದ್ದರು. ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು ಮತ್ತು ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣಾ ಪತ್ರ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಮಾಡಿದರು ಎಂದು ವಾಗ್ದಾಳಿ ನಡೆಸಿದ್ದರು.