ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ಹಿಂದೆ ಸರಿದಿದ್ದಾರೆ. ಸ್ಟಾರ್ ಪ್ರಚಾರಕ ಪಟ್ಟಿಯಿಂದ ತಮ್ಮ ಹೆಸರು ಕೈ ಬಿಟ್ಟಿದ್ದಕ್ಕೆ ಅವರು ಪಕ್ಷದ ಪರವಾಗಿ ಪ್ರಚಾರ ಮಾಡುವುದರಿಂದ ಹಿಂದೆ ಸರಿದಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಬೇಕು ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ, ಶಶಿ ತರೂರ್ ಅವರಿಗೆ ಆಹ್ವಾನ ನೀಡಿತ್ತು. ಆದರೆ ಅವರು ಪ್ರಚಾರಕ್ಕೆ ಬರಲು ನಿರಾಕರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ, ಗಾಂಧಿ ಕುಟುಂಬ ಬೆಂಬಲಿತ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧೆ ಮಾಡಿದ ಬಳಿಕ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪ ಇದೆ. ಆದರೆ ಇದನ್ನು ಕಾಂಗ್ರೆಸ್ ಮೂಲಗಳು ನಿರಾಕರಿಸಿವೆ.
'ಶಶಿ ತರೂರ್ ಯಾವತ್ತಿಗೂ ಸ್ಟಾರ್ ಪ್ರಚಾರಕ ಆಗಿರಲಿಲ್ಲ' ಎಂದು ಕಾಂಗ್ರೆಸ್ ಮೂಲಗಳು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಡಿ. 1 ಹಾಗೂ 5 ರಂದು ಗುಜರಾತ್ ವಿಧಾನಸಭೆಗೆ ಮತದಾನ ನಡೆಯಲಿದ್ದು, ಕಾಂಗ್ರೆಸ್ 40 ಮಂದಿಯನ್ನು ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಇದ್ದಾರೆ.