ನವದೆಹಲಿ: 2023-24ರ ಕೇಂದ್ರ ಬಜೆಟ್‌ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳ 'ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮಾವೇಶ'ದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.
'ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮಾವೇಶ' ಜನವರಿಯಲ್ಲಿ ದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಸಂಸತ್ತಿನಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಈ ಹಿಂದೆ ನರೇಂದ್ರ ಮೋದಿ ಅವರು 2022ರ ಜೂನ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.