ನವದೆಹಲಿ: 2021 ರ ಅಂತ್ಯದ ವೇಳೆಗೆ ದೇಶದಲ್ಲಿರುವ 5.54 ಲಕ್ಷ ಕೈದಿಗಳಲ್ಲಿ 4.27 ಲಕ್ಷ ಕೈದಿಗಳು (prisoners) ಅಥವಾ 77.1% ಕೈದಿಗಳು ಇನ್ನೂ ವಿಚಾರಣೆಗಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರವು ಮಂಗಳವಾರ ಸಂಸತ್ತಿಗೆ ತಿಳಿಸಿದೆ.
"ವಿಚಾರಣಾಧೀನ ಕೈದಿಗಳನ್ನು (Undertrials) ನ್ಯಾಯಾಲಯದ ಆದೇಶದ ಮೇರೆಗೆ ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಮೂಲಕ ಕಾರಾಗೃಹಗಳಲ್ಲಿ ಬಂಧಿಸಲಾಗುತ್ತದೆ" ಎಂದು ಸರ್ಕಾರ ಹೇಳಿದೆ.
ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ ನಾಯಕ ಶ್ಯಾಮ್ ಸಿಂಗ್ ಯಾದವ್ ಅವರ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಆಶಿಶ್ ಮಿಶ್ರಾ ಅವರು ಅಂಕಿಅಂಶಗಳನ್ನು ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿಚಾರಣೆಗೆ ಕಾಯುತ್ತಿರುವ ಕೈದಿಗಳ ಸಂಖ್ಯೆಯ ಬಗ್ಗೆ ತಿಳಿಯಲು ಯಾದವ್ ಪ್ರಯತ್ನಿಸಿದ್ದರು. ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ಉತ್ತರ ಪ್ರದೇಶ ರಾಜ್ಯದಲ್ಲಿ 90,606 ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.
ಈ ಪೈಕಿ 21,942 ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರು, 4,657 ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರು ಮತ್ತು 41,678 ಇತರೆ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಸಚಿವರು ಹೇಳಿದರು.
ಲಾಕ್‌ಡೌನ್ ನಂತರ ಬಂಧನಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆಯೇ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರವಾಗಿ, ಅಂತಹ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಸರ್ಕಾರ ಹೇಳಿದೆ.