ನವದೆಹಲಿ: ಕೋವಿಡ್-19 ಕುರಿತು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಆದರೆ, ಜನದಟ್ಟಣೆಯ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಹಾಗೂ ಕೋವಿಡ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಳ್ಳಬೇಕು ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್ ಬುಧವಾರ ಹೇಳಿದ್ದಾರೆ.
'ಮಧುಮೇಹ, ಅಧಿಕ ರಕ್ತದೊತ್ತಡ ಇರುವವರು (ಕೋಮಾರ್ಬಿಡಿಟಿ), ವಯಸ್ಸಾದವರು ಜನಜಂಗುಳಿ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು' ಎಂದೂ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ಪೌಲ್ ಅವರು ಈ ಸಲಹೆಗಳನ್ನು ನೀಡಿದ್ದಾರೆ.
ಸಭೆ: 'ಕೆಲ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿತ್ತಿವೆ. ಈ ಹಿನ್ನೆಲೆಯಲ್ಲಿ, ದೇಶದಲ್ಲಿನ ಪರಿಸ್ಥಿತಿ ಅವಲೋಕನ ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ಅಧಿಕಾರಿಗಳು ಹಾಗೂ ತಜ್ಞರ ಸಭೆ ನಡೆಸಲಾಯಿತು' ಎಂದು ಸಚಿವ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.
'ಕಣ್ಗಾವಲನ್ನು ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸನ್ನದ್ಧರಾಗಿದ್ದೇವೆ' ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಆರೋಗ್ಯ, ಫಾರ್ಮಾಸ್ಯೂಟಿಕಲ್, ಬಯೋಟೆಕ್ನಾಲಜಿ, ಆಯುಷ್ ಇಲಾಖೆಗಳ ಕಾರ್ಯದರ್ಶಿಗಳು, ಐಸಿಎಂಆರ್ ನಿರ್ದೇಶಕ ಜನರಲ್ ರಾಜೀವ್ ಬಹಲ್, ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.