ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಿಗದಿತ ಸ್ಥಳದ ಸಮೀಪ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆ ನಿಗದಿಯಾಗಿದ್ದ ಮೇದಿನಿಪುರ ಜಿಲ್ಲೆಯ ಕೊಂಟೈ ಪಟ್ಟಣದಿಂದ ಕೇವಲ 1.5 ಕಿ.ಮೀ ದೂರದ ಭೂಪತಿನಗರದಲ್ಲಿ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 11.15ರ ಸುಮಾರಿಗೆ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಧಿವಿಜ್ಞಾನ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಮಾಹಿತಿ ಸಂಗ್ರಹಿಸಿದ್ದಾರೆ.
ಸ್ಫೋಟದ ಹಿಂದಿನ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಹುಲ್ಲು ಮತ್ತು ಮಣ್ಣಿನ ಮನೆಯ ಛಾವಣಿ ಹಾರಿ ಹೋಗಿದೆ ಎಂದು ತಿಳಿಸಿದ್ದಾರೆ.