ನವದೆಹಲಿ: ಫಾಸ್ಟ್ಯಾಗ್‌ಗಳನ್ನು ಹೊಂದಿರದ ವಾಹನಗಳು ಟೋಲ್‌ಗಳಲ್ಲಿ ದುಪ್ಪಟ್ಟು ತೆರಿಗೆ ಪಾವತಿಸುವುದನ್ನು ಕಡ್ಡಾಯಗೊಳಿಸಿರುವ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ದೆಹಲಿ ಹೈಕೋರ್ಟ್ ಶುಕ್ರವಾರ ಸೂಚಿಸಿದೆ.
ಮುಖ್ಯನ್ಯಾಯಮೂರ್ತಿ ಸತೀಶಚಂದ್ರ ಶರ್ಮ ಹಾಗೂ ಸುಬ್ರಮಣಿಯಂ ಪ್ರಸಾದ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.
ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಎನ್‌ಎಚ್‌ಎಐ ಹಾಗೂ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿತು.ರವೀಂದ್ರ ತ್ಯಾಗಿ ಎಂಬುವವರು ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.