ನವದೆಹಲಿ: ವೈರಲ್ ಜ್ವರದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ (ಏಮ್ಸ್) ದಾಖಲು ಮಾಡಲಾಗಿತ್ತು.
ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ನಿರ್ಮಲಾ ಸೀತಾರಾಮನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಬುಧವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಕೆಲ ದಿನಗಳಲ್ಲೇ ಅವರು ಚೇತರಿಸಿಕೊಂಡಿದ್ದರು.
ಕೇಂದ್ರ ಬಜೆಟ್ ಮಂಡಿಸಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಅವರು ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಕೆಲಸದ ಒತ್ತಡದಿಂದಾಗಿ ಅನಾರೋಗ್ಯ ಕಾಣಿಸಿಕೊಂಡಿರಬಹುದು ಎಂದು ಅವರ ಆಪ್ತರು ಹೇಳಿದ್ದಾರೆ.