ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಟೀಕಿಸಿದ್ದ ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.
ಕಾಶ್ಮೀರ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 2018ರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ಅವರ ಟ್ರಾನ್ಸಿಟ್ ರಿಮಾಂಡ್ ಅನ್ನು ರದ್ದುಗೊಳಿಸಿದ ನಂತರ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಟೀಕಿಸಿ 2018ರಲ್ಲಿ ಟ್ವೀಟ್ ಮಾಡಿದ್ದಕ್ಕೆ ಇಂದು ಬೇಷರತ್ ಕ್ಷಮೆಯಾಚಿಸಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಅಗ್ನಿಹೋತ್ರಿ ಪರ ವಕೀಲರು ಬೇಷರತ್ ಕ್ಷಮೆಯಾಚಿಸಿ ಅಫಿಡವಿಟ್ ಸಲ್ಲಿಸಿದ್ದಾರೆ. ಈ ವೇಳೆ ಮಾರ್ಚ್ 16, 2023 ರಂದು ನಡೆಯುವ ಮುಂದಿನ ವಿಚಾರಣೆಗೆ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಪೀಠ ಅಗ್ನಿಹೋತ್ರಿಗೆ ಸೂಚಿಸಿದೆ.
ಅಗ್ನಿಹೋತ್ರಿ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು.
ಅಗ್ನಿಹೋತ್ರಿ ಪರ ವಕೀಲರು ಇಂದು ಕ್ಷಮೆಯಾಚಿಸಿ ಅಫಿಡವಿಟ್ ಸಲ್ಲಿಸಿದ್ದಾರೆ ಮತ್ತು ತಮ್ಮ ಕಕ್ಷಿದಾರರು ಟ್ವೀಟ್‌ಗಳನ್ನು ಡಿಲೀಟ್ ಮಾಡಿರುವುದಾಗಿ ತಿಳಿಸಿದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಮಿಕಸ್ ಕ್ಯೂರಿ, ಅವರು ಟ್ವೀಟ್‌ಗಳನ್ನು ಡಿಲೀಟ್ ಮಾಡಿಲ್ಲ. ಸಾಮಾಜಿಕ ವೇದಿಕೆ ಟ್ವಿಟರ್ ಅವರ ಟ್ವಿಟ್ ಗಳನ್ನು ತೆಗೆದು ಹಾಕಿದೆ ಎಂದು ಹೇಳಿದರು.