ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಿನತ್ತ ಮುನ್ನುಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ.
ಜನಾದೇಶವನ್ನು ಗೌರವಿಸುತ್ತೇನೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ವರಿಷ್ಠರಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ರಾಜಕೀಯ ಬದಿಗೊತ್ತಿ ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಅವರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನದವರೆಗಿನ ಚುನಾವಣಾ ಆಯೋಗದ ಮಾಹಿತಿ ಪ್ರಕಾರ, 68 ಸ್ಥಾನಗಳ ಪೈಕಿ 32 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 13ರಲ್ಲಿ, ಕಾಂಗ್ರೆಸ್ 16, ಮತ್ತಿತರರು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಇತರ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ಮಧ್ಯೆ ಚುನಾವಣಾ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ನೂತನ ಶಾಸಕರ ಸಭೆ ನಡೆಸಲಿದ್ದು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.