ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಸಿಯೊಮ್ ಸೇತುವೆ ಸೇರಿದಂತೆ 27 ಮೂಲಸೌಕರ್ಯ ಯೋಜನೆಗಳನ್ನು ಮಂಗಳವಾರ ಉದ್ಘಾಟಿಸಿದರು.
ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಯೋಧರ ತ್ವರಿತ ಸಂಚಾರಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ವಿವಿಧ ಅಭಿವೃದ್ದಿ ಯೋಜನೆಗಳನ್ನು ಘೋಷಣೆ ಮಾಡಿತ್ತು.
ಈ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಾಗಿದ್ದು ಇಂದು 27 ಯೋಜನೆಗಳಿಗೆ ಚಾಲನೆ ನೀಡಲಾಯಿತು. ಯೋಜನೆಗಳಿಗೆ ₹ 724 ಕೋಟಿ ವೆಚ್ಚ ಮಾಡಲಾಗಿದೆ.
ಸಿಯೊಮ್ ನದಿಯ ಮೇಲೆ 100 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆ ನಿರ್ಮಾಣ ಮಾಡಲಾಗಿದೆ. ಇದರಿಂದ ಗಡಿ ನಿಯಂತ್ರಣ ರೇಖೆಯಲ್ಲಿರುವ ಪ್ರದೇಶಗಳಿಗೆ ಯೋಧರು ತೆರಳಲು ಸಹಕಾರಿಯಾಗಲಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಅಸ್ಸಾಂ ಹಾಗೂ ಉತ್ತರಾಖಂಡ್ ರಾಜ್ಯಗಳ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಈ ಅಭಿವೃದ್ಧಿ ಯೋಜನೆಗಳಲ್ಲಿ ರಸ್ತೆ, ಸೇತುವೆ, ಉಕ್ಕಿನ ಸೇತುವೆ ಯೋಜನೆಗಳು ಸೇರಿವೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಏಳು ಗಡಿ ರಾಜ್ಯಗಳಲ್ಲಿ ಸರ್ಕಾರ ನಿರ್ಮಿಸಿರುವ ಹಲವಾರು ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿರುವುದು ನನಗೆ ಸಂತಸ ಮೂಡಿಸಿದೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.