ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಜೂನ್ 2024ರವರೆಗೆ ಅವರು ಅಧ್ಯಕ್ಷರಾಗಿರಲಿದ್ದಾರೆ ಎಂಬ ತೀರ್ಮಾನವನ್ನು ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಂಗಳವಾರ ತೆಗೆದುಕೊಳ್ಳಲಾಯಿತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಡ್ಡಾ ಅವರ ಅವಧಿಯನ್ನು ಮುಂದುವರೆಸುವ ಬಗ್ಗೆ ಪ್ರಸ್ತಾವನೆ ಮಂಡಿಸಿದರು. ಸಭೆ ಅವಿರೋಧವಾಗಿ ಪ್ರಸ್ತಾವನೆಗೆ ಬೆಂಬಲ ಸೂಚಿಸಿತು.
ನಡ್ಡಾ ಅವರ ಅಧ್ಯಕ್ಷತೆಯಲ್ಲಿ 2024ರ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ಅಮಿತ್ ಶಾ ಇದೇ ವೇಳೆ ಹೇಳಿದರು.
2023 ರ ಈಶಾನ್ಯ ಭಾರತ ರಾಜ್ಯಗಳ ವಿಧಾನಸಭೆ ಚುನಾವಣೆ ಸೇರಿದಂತೆ ಇತರ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡ್ಡಾ ನೇತೃತ್ವದಲ್ಲಿ ಎದುರಿಸಲಾಗುತ್ತದೆ ಎಂದು ಶಾ ಹೇಳಿದರು.