ನವದೆಹಲಿ:ಚೀನಾದ ಅತಿಕ್ರಮಣಕ್ಕೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದಿಲ್ಲ. ಏಕೆಂದರೆ ಅದು ದೇಶದ ಭದ್ರತೆಗೆ ಸಂಬಂಧಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.
ಮೂಲಗಳ ಪ್ರಕಾರ, ಸೋಮವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ, ಚೀನಾದ ಅತಿಕ್ರಮಣ ವಿಷಯ ಪ್ರಸ್ತಾಪಿಸಿ, ಇದನ್ನು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಕೇಳಿಕೊಂಡಿದೆ.
"ಇದಕ್ಕೆ ಉತ್ತರಿಸಿದ ಸರ್ಕಾರ, ಭದ್ರತೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದೆ" ಎಂದು ಮೂಲಗಳು ತಿಳಿಸಿವೆ.
ಆದರೆ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
"ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ 27 ಪಕ್ಷಗಳ 37 ಮುಖಂಡರು ಭಾಗವಹಿಸಿದ್ದರು. ಇಂದಿನ ಸಭೆ ಉತ್ತಮವಾಗಿ ನಡೆಯಿತು. ಸದನವನ್ನು ಉತ್ತಮವಾಗಿ ನಡೆಸಲು ನಾನು ಪ್ರತಿಪಕ್ಷಗಳ ಸಹಕಾರವನ್ನು ಕೋರುತ್ತೇನೆ. ನಾವು ಸಂಸತ್ತಿನಲ್ಲಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧರಿದ್ದೇವೆ" ಎಂದು ಜೋಶಿ ತಿಳಿಸಿದರು.