ಚೆನ್ನೈ: ಅನುಮತಿ ಪಡೆಯದೆ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ 3,500 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ.
ಸೂಕ್ತ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡರು ಸೇರಿದಂತೆ 3,500 ಕಾರ್ಯಕರ್ತರು ವಿರುದ್ಧ ಐಪಿಸಿ ಸೆಕ್ಷನ್ 143, 151 ಆರ್/ಡಬ್ಲ್ಯು 41(6) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಮಧ್ಯಸ್ಥಿಕೆ ವಹಿಸುವಂತೆ ಕೋರಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಮಂಗಳವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದೇ ವೇಳೆ ಪಕ್ಷದ ಕಾರ್ಯಕರ್ತರು ಡಿಎಂಕೆ ಸರ್ಕಾರದ ವಿರುದ್ಧ ಮೊಂಬತ್ತಿ ಬೆಳಗಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.
ಇತ್ತೀಚೆಗೆ ಡಿಎಂಕೆ ಕೌನ್ಸಿಲರ್‌ನಿಂದ ಬರ್ಬರವಾಗಿ ಹತ್ಯೆಗೀಡಾದ ಲ್ಯಾನ್ಸ್ ನಾಯಕ್ ಪ್ರಭು ಅವರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.