ನವದೆಹಲಿ: ಬೋರ್ಡ್ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿವೆ ಎಂಬ ವದಂತಿಗಳ ಬಗ್ಗೆ ಜಾಗೃತರಾಗಿರಿ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸೋಮವಾರ ಎಚ್ಚರಿಕೆ ನೀಡಿದೆ.
ಇಂತಹ ವದಂತಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದೆ.
'2023ರ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದೆ ಎಂದು ಯೂಟ್ಯೂಬ್, ಫೇಸ್‌ಬುಕ್, ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಕೆಲವರು ವದಂತಿಗಳನ್ನು ಹರಡುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಇಂತಹ ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ಗುಂಪುಗಳು ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟು ಮಾಡಿ, ಹಣಕ್ಕೆ ಬೇಡಿಕೆಯಿಟ್ಟು ಮೋಸ ಮಾಡುವ ಸಾಧ್ಯತೆ ಇದೆ' ಎಂದೂ ಹೇಳಿದ್ದಾರೆ.
ಪರೀಕ್ಷೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿಸುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಸೂಚಿಸಲಾಗಿದೆ ಎಂದೂ ವಿವರಿಸಿದ್ದಾರೆ.
'ಸುಳ್ಳು ಸುದ್ದಿ ಹರಡುವುದರಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದೂ ಮಂಡಳಿ ಎಚ್ಚರಿಕೆ ನೀಡಿದೆ.
10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯು ನಡೆಯುತ್ತಿದ್ದು, ಏಪ್ರಿಲ್ 5ರಂದು ಕೊನೆಗೊಳ್ಳಲಿದೆ.