ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಸೇರಿದಂತೆ ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.
"ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15 ರ ಸುಮಾರಿಗೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ" ಎಂದು ಪ್ರಕಟಣೆ ತಿಳಿಸಿದೆ.
"ಮೂಲಸೌಕರ್ಯ ಯೋಜನೆಗಳ ಕ್ಷಿಪ್ರಗತಿಯ ಅಭಿವೃದ್ಧಿಯು ದೇಶದಾದ್ಯಂತ ವಿಶ್ವ ದರ್ಜೆಯ ಸಂಪರ್ಕವನ್ನು ಖಾತ್ರಿಪಡಿಸುವ ಪ್ರಧಾನಿಯವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಈ ಪ್ರಯತ್ನದಲ್ಲಿ ಮುಂದೆ ಸಾಗುತ್ತಿರುವ ಪ್ರಧಾನಿಯವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ" ಪ್ರಕಟಣೆ ತಿಳಿಸಿದೆ.
ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿ-275ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6-ಪಥವನ್ನು ಒಳಗೊಂಡಿದೆ. 118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳಿಗೆ ಇಳಿಸಿದೆ. ಇದು ಈ ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ.
ಇದೇ ವೇಳೆ ಮೈಸೂರು-ಕುಶಾಲನಗರ 4 ಲೇನ್ ಹೆದ್ದಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ. 92 ಕಿಮೀ ಉದ್ದದ ಈ ಯೋಜನೆಯನ್ನು ಸುಮಾರು 4130 ಕೋಟಿ. ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.