ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ದೆಹಲಿ ಘಟಕದ ಕಾಂಗ್ರಸ್ ಅಧ್ಯಕ್ಷ ಅನಿಲ್ ಚೌಧರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೇಜ್ರಿವಾಲ್ ಹಾಗೂ ಮನೀಷ್ ಸಿಸೋಡಿಯಾ ವಿರುದ್ಧ ಘೋಷಣೆಗಳನ್ನು ಕೂಗಿದರು.
'ದೆಹಲಿಯ ಎಎಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ. ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಆಗಿರುವವರೆಗೂ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕು' ಎಂದು ಕಾಂಗ್ರೆಸ್ ಒತ್ತಾಯಿಸಿದೆ.
'ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರೇ ಸೂತ್ರಧಾರರು' ಎಂದು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧೋರಿ ಆರೋಪಿಸಿದರು.
'ಕೇಜ್ರಿವಾಲ್ ಅವರು ಹೇಳುವಂತೆ ಅವರ ಮಂತ್ರಿಗಳು 'ಮುಗ್ಧ'ರೇ ಆಗಿದ್ದರೆ, ಸುಪ್ರೀಂ ಕೋರ್ಟ್ ಯಾಕಾಗಿ ಅವರಿಗೆ ಪರಿಹಾರ ನೀಡಲಿಲ್ಲ. ಯಾಕಾಗಿ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಅವರ ರಾಜೀನಾಮೆಗಳನ್ನು ಸ್ವೀಕರಿಸಲಾಯಿತು' ಎಂದು ದೆಹಲಿ ಘಟಕದ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ್ ಪ್ರಶ್ನಿಸಿದರು. ಈ ಸಂಬಂಧ ದೆಹಲಿಯ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ.