ಅಗರ್ತಲಾ: ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸಹಾ ಅವರನ್ನು ಈಶಾನ್ಯ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ ಸ್ಥಾನಕ್ಕೆ ಎರಡನೇ ಅವಧಿಗೆ ಆಯ್ಕೆ ಮಾಡಲಾಗಿದೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಬಿಜೆಪಿಯ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಎಲ್ಲ ಶಾಸಕರು ಅವಿರೋಧವಾಗಿ ಮಾಣಿಕ್ ಸಹಾ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ತ್ರಿಪುರಾ ಮುಖ್ಯಮಂತ್ರಿಯಾಗಿದ್ದ ಬಿಪ್ಲವ್ ಕುಮಾರ್ ದೇವ್ ಕಳೆದ ವರ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಸಹಾ ಅವರನ್ನು ಆಯ್ಕೆ ಮಾಡಲಾಗಿತ್ತು.
ಪ್ರಮಾಣವಚನ ಸಮಾರಂಭ ಮಾರ್ಚ್ 8ರಂದು ನಡೆಯಲಿದೆ.
ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ, ಆಡಳಿತರೂಢ ಬಿಜೆಪಿ ಹಾಗೂ ಅದರ ಮಿತ್ರಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಪಕ್ಷಗಳು ಕ್ರಮವಾಗಿ 32 ಹಾಗೂ ಒಂದು ಸ್ಥಾನಗಳನ್ನು ಗೆದ್ದಿವೆ. ಈ ಮೂಲಕ ಸತತ ಎರಡನೇ ಬಾರಿಗೆ ಈ ಮೈತ್ರಿಕೂಟವು ತ್ರಿಪುರಾದಲ್ಲಿ ಅಧಿಕಾರಕ್ಕೆ ಮರಳಿದೆ.
ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಸಹಾ ಅವರು ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.