ನವದೆಹಲಿ: ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಸೂಚಿಸಲಾಗಿದೆ.
ಸಿಎಂ ಅರವಿಂದ ಕೇಜ್ರಿವಾಲ್ ಅವರು, ಲೆಫ್ಟಿನೆಂಟ್ ಗವರ್ನರ್ ಅವರಿಗೆ ಈ ಎರಡು ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಗರಣದ ಆರೋಪ ಹೊತ್ತಿರುವ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ನಿನ್ನೆ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ, ಸರ್ಕಾರದ ನಿರ್ವಹಣೆ ದೃಷ್ಟಿಯಿಂದ ಇಬ್ಬರು ಶಾಸಕರ ಹೆಸರನ್ನು ಸಚಿವ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.
ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿ ಭಾನುವಾರ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಜೈನ್ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದರು.