ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚಿಸಿದೆ.
ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚಿಸಿದೆ.
ಉತ್ತರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಹರಿಯಾಣ ಮತ್ತು ದೆಹಲಿಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿನ ತೀವ್ರತೆ ತಗ್ಗಿಸಿ ಶೂನ್ಯ ಮಟ್ಟ ಕಾಯ್ದುಕೊಳ್ಳುವ ಸಂಬಂಧ ಅಗತ್ಯವಿರುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಮಾರ್ಚ್‌ನಿಂದ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ 10,262 ಪ್ರಕರಣಗಳು ದೃಢಪಟ್ಟಿವೆ. ಮಾರ್ಚ್ ಕೊನೆಯ ವಾರದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಶೇ 4.7ರಷ್ಟಿತ್ತು. ಆದರೆ, ಏಪ್ರಿಲ್ ಎರಡನೇ ವಾರದಲ್ಲಿ ಈ ಪ್ರಮಾಣ ಶೇ. 5.5ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ಸೋಂಕು ಏರಿಕೆಯಾದರೂ ಆಸ್ಪತ್ರೆಗೆ ದಾಖಲಾಗುವವರು ಮತ್ತು ಸಾವಿನ ಪ್ರಮಾಣ ಕಡಿಮೆ ಇದೆ. ಇದು ತುಸು ನಿರಾಳ ತಂದಿದೆ. ಆದರೂ, ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಜನರ ಆರೋಗ್ಯದ ದೃಷ್ಟಿಯಿಂದ ಪ್ರಾಥಮಿಕ ಹಂತದಲ್ಲಿಯೇ ಸೋಂಕಿನ ತಡೆಗೆ ಸರ್ಕಾರಗಳು ಪ್ರತಿದಿನವೂ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.
ಸೋಂಕು ಪೀಡಿತ ಸ್ಥಳಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು. ಅರ್ಹರಿಗೆ ಮುನ್ನೆಚ್ಚರಿಕೆ ಲಸಿಕೆ ಕೊಡಿಸಬೇಕು. ಕಣ್ಗಾವಲು ಬಲಗೊಳಿಸಬೇಕು. ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ವಾರಗಳ ಕಾಲ ಜ್ವರದಿಂದ ಬಳಲುತ್ತಿರುವವರಿಗೆ ಆರ್‌ಟಿ ಪಿಸಿಆರ್ ಮತ್ತು ಆಯಂಟಿಜೆನ್ ಟೆಸ್ಟ್ ಮಾಡಿಸಬೇಕು. ಹೊಸ ಕ್ಲಸ್ಟರ್‌ಗಳಲ್ಲಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.