ಪಟ್ನಾ (PTI): ಬಿಹಾರದಲ್ಲಿ ಬೇಸಿಗೆಯ ಬಿಸಿ ಹೆಚ್ಚಾಗಿದ್ದು, ರಾಜ್ಯದ ಕೆಲ ನಗರಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಪಟ್ನಾದಲ್ಲಿ 41.5 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಮುಂದಿನ ಕೆಲ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಸಮಯವನ್ನು ಬದಲಿಸುವಂತೆ ಜಿಲ್ಲಾಡಳಿತವು ಶುಕ್ರವಾರ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಅಂಗನವಾಡಿ, ಪ್ರಾಥಮಿಕ ಶಾಲೆ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ. ಬೆಳಿಗ್ಗೆ 11.45ರ ನಂತರ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬಾರದೆಂದು ಸೂಚಿಸಿದೆ. ಇದು ಏ.15ರಿಂದಲೇ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.