ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ತೆರಳಿದ್ದರು.
ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.