ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಕಾಂಗ್ರೆಸ್ ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ್ದು, 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ , ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಭಾರತೀಯ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಎ ರಾಜಾ, ಭಾರತೀಯ ಕಮ್ಯುನಿಸ್ಟ್ ಮಾರ್ಕ್ಸಿಸ್ಟ್ ಪಕ್ಷದ ಮುಖಂಡ ಸೀತಾರಾಮ್ ಯೆಚೂರಿ, ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಮತ್ತು ಅಲ್ಲಿನ ಮಾಜಿ ಮುಖ್ಯಮಂತ್ರಿ ಡಾ ಫಾರೂಕ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಚಲನ ಚಿತ್ರ ರಂಗದ ಕಲಾವಿದರು ಮತ್ತು ತಂತ್ರಜ್ಞರು, ಅವರೂ ಸೇರಿದಂತೆ ಹಲವು ಗಣ್ಯರು ಈ ವಿಶೇಷ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಗಣ್ಯರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಒಳಗೊಂಡಂತೆ ಸಾರ್ವಜನಿಕರು ಈ ಸಮಾರಂಭದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ನಾಮಫಲಕ ಬದಲಾವಣೆ
ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ ಹೆಸರಿನದಲ್ಲಿ ಸಿಎಂ ಫಲಕವನ್ನು ತೆಗೆದು ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ವಿಧಾನಸೌಧ ಸಿಬ್ಬಂದಿ ಅಳವಡಿಸಿದ್ದಾರೆ. ಸಿಎಂ ಕಚೇರಿ ವಿಧಾನಸೌಧದ ಮೂರನೇ ಮಹಡಿಯಲ್ಲಿದೆ. ಕೊಠಡಿ ಸಂಖ್ಯೆ 323 ಆಗಿದೆ.