ನವದೆಹಲಿ(PTI): ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವುದಾಗಿ ನಕಲಿ ವಿಡಿಯೊ ಹಂಚಿಕೊಂಡಿರುವ ಪ್ರಕರಣದಲ್ಲಿ ತನ್ನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್‌ಎಸ್‌ಎ)ಅಡಿ ಪ್ರಕರಣ ದಾಖಲಿಸಿಕೊಂಡಿರುವುದನ್ನು ಪ್ರಶ್ನಿಸಿ ಬಂಧಿತ ಯೂಟ್ಯೂಬರ್ ಮನೀಷ್ ಕಶ್ಯಪ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ಮನೀಷ್ ಮಾರ್ಚ್ 18ರಂದು ಬಿಹಾರದ ಜಗದೀಶ್‌ಪುರ ಪೊಲೀಸ್ ಠಾಣೆಗೆ ಶರಣಾಗಿದ್ದ. ಬಳಿಕ ಈತನನ್ನು ತಮಿಳುನಾಡಿಗೆ ಕರೆಯೊಯ್ಯಲಾಗಿತ್ತು ಮತ್ತು ಅಲ್ಲಿ ಎನ್‌ಎಸ್‌ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಮನೀಷ್ ವಿರುದ್ಧ ತಮಿಳುನಾಡಿನಲ್ಲಿ ಆರು ಮತ್ತು ಬಿಹಾರದಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದವು.
'ಮನೀಷ್ ವಿರುದ್ಧ ರಾಜ್ಯದಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳು ರಾಜಕೀಯ ಪ್ರೇರಿತವಾದುದಲ್ಲ. ಈತ ನಕಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತರಲು ಯತ್ನಿಸಿದ್ದಾನೆ' ಎಂದು ಅರ್ಜಿಗೆ ಪ್ರತಿಕ್ರಿಯಿಸಿ ತಮಿಳುನಾಡು ಸರ್ಕಾರ ಹೇಳಿದೆ.
ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದರಲ್ಲೇ ಅಡಕಗೊಳಿಸಬೇಕು ಎಂದು ಮನೀಷ್ ಅರ್ಜಿಯಲ್ಲಿ ಕೋರಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
'ತಮಿಳುನಾಡಿನ ಜನರ ಮತ್ತು ಬಿಹಾರದ ವಲಸೆ ಕಾರ್ಮಿಕರ ನಡುವೆ ಗಲಭೆ ಉಂಟುಮಾಡಲು ಆರೋಪಿಯು ಚಿತಾವಣೆ ನಡೆಸಿದ್ದಾನೆ' ಎಂದೂ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಆರೋಪಿಸಲಾಗಿದೆ.
ಮನೀಷ್ ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 28ರಂದು ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿತ್ತು.