ಬದಿಯಡ್ಕ: ಊರಿನ ಪ್ರತಿಯೊಂದು ಮನೆ ಮನ ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಒಂದಾದಾಗ ಅಲ್ಲಿನ ಸಾನ್ನಿಧ್ಯ ವೃದ್ಧಿಯಾಗುವುದಲ್ಲದೆ ಆ ಕ್ಷೇತ್ರವು ಬೆಳಗುತ್ತದೆ. ನಿರಂತರ ಧಾರ್ಮಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಮುಂದಿನ ಪೀಳಿಗೆ ಸಾರ್ಥಕ ಬದುಕಿಗೆ ಕೊಡುಗೆಯನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.
ಜೀರ್ಣೋದ್ಧಾರ ಗೊಳ್ಳುತ್ತಿರುವ ನೀರ್ಚಾಲು ಮಾನ್ಯ ಸಮೀಪದ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆದ ಮಹಾವಿಷ್ಣು ಭಕ್ತ ಯುವ ಸಂಗಮ ಕಾರ್ಯಕ್ರಮದಲ್ಲಿ ಆಶೀರ್ವಚನವನ್ನಿತ್ತು ಶ್ರೀಗಳು ಮಾತನಾಡಿದರು.
ದೇವಸ್ಥಾನಗಳು ಜೀರ್ಣೋದ್ಧಾರಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಯುವ ಜನತೆಯು ತಮ್ಮನ್ನು ತಾವು ತೊಡಗಿಸಿಕೊಂಡು ಕೃತಾರ್ಥರಾಗಬೇಕೆಂದರು. ವೇದಿಕೆಯಲ್ಲಿ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಾತನಾಡಿ ಆಶೀರ್ವಚನವನ್ನಿತ್ತರು. ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ, ಧಾರ್ಮಿಕ ಮುಂದಾಳು ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಶಿಧರ ಚೇಡಿಕಾನ, ಸೇವಾ ಸಮಿತಿಯ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಯುವಕೃಂದದ ಅಧ್ಯಕ್ಷ ನಾರಾಯಣ ಉಳ್ಳೋಡಿ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಳಿ ಸ್ವಾಗತಿಸಿ, ಕಾರ್ಯದರ್ಶಿ ಮಹೇಶ್ ವಳಕುಂಜ ವಂದಿಸಿದರು. ಸುಂದರ ಶೆಟ್ಟಿ ಕೊಲ್ಲಂಗಾನ ಕಾರ್ಯಕ್ರಮ ನಿರೂಪಿಸಿದರು. ಸಭೆಯ ಬಳಿಕ ಕಾರ್ಮಾರು ಶ್ರೀ ಮಹಾವಿಷ್ಣು ಮಹಿಳಾ ವೃಂದದ ನೇತೃತ್ವದಲ್ಲಿ ತಿರುವಾದಿರ ನೃತ್ಯ ನಡೆಯಿತು.