ನವದೆಹಲಿ: ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ವೇಳೆ ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸುವ ಪ್ರಯತ್ನ ಮುಂದುವರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ಅವರನ್ನು ಭಾನುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು.
ಇದು ನಿತೀಶ್ ಹಾಗೂ ಕೇಜ್ರಿವಾಲ್ ಅವರ ನಡುವಿನ ಎರಡನೇ ಭೇಟಿಯಾಗಿದೆ. ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಇದ್ದರು. ಈ ಮೊದಲು, ಏಪ್ರಿಲ್ 12ರಂದು ಉಭಯ ನಾಯಕರು ಭೇಟಿಯಾಗಿದ್ದರು.
ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷವು ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಈ ಸಮಾರಂಭ ನಡೆದ ಮಾರನೇ ದಿನವೇ ನಿತೀಶ್ ಅವರು ಕೇಜ್ರಿವಾಲ್ ನಿವಾಸಕ್ಕೆ ತೆರಳಿ, ಮಾತುಕತೆ ನಡೆಸಿರುವುದಕ್ಕೆ ಮಹತ್ವ ಬಂದಿದೆ.
ನಿತೀಶ್‌ಕುಮಾರ್ ಅವರ ಈ ಭೇಟಿ ಹಿಂದೆ, ವಿರೋಧ ಪಕ್ಷಗಳಲ್ಲಿನ ಒಗ್ಗಟ್ಟು ಛಿದ್ರವಾಗಿಲ್ಲ ಎಂಬ ಸಂದೇಶವನ್ನು ರವಾನಿಸುವ ಉದ್ದೇಶವಿತ್ತು ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯಗಳಲ್ಲಿ ಸಂಘರ್ಷ: ರಾಷ್ಟ್ರಮಟ್ಟದಲ್ಲಿ ವಿಪಕ್ಷಗಳ ಒಗ್ಗಟ್ಟು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್‌ನ ದೆಹಲಿ ಮತ್ತು ಪಂಜಾಬ್ ರಾಜ್ಯ ಘಟಕಗಳಿಂದ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ.
ನಿತೀಶ್ ಕುಮಾರ್ ಅವರು ಈಗಾಗಲೇ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ವರಿಷ್ಠ ಶರದ್ ಪವಾರ್, ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಸೇರುವುದಿಲ್ಲ ಎಂಬುದಾಗಿ ನವೀನ್ ಪಟ್ನಾಯಕ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜ್ಯಗಳಲ್ಲಿ ಆಯಾ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲಿಸಿದಲ್ಲಿ ಮಾತ್ರ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಮಮತಾ ಬ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಬಿಜೆಪಿ ವಿರುದ್ಧ ವಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೆಂಗಳೂರಿನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇದಿಕೆಯಾಗಿತ್ತಾದರೂ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಬಿಎಸ್‌ಪಿ ನಾಯಕಿ ಮಾಯಾವತಿ ಅವರಿಗೂ ಆಹ್ವಾನ ಇರಲಿಲ್ಲ.