ನವದೆಹಲಿ: ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ನಡುವೆ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಬುಧವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನಾನೇ ನೇಣು ಹಾಕಿಕೊಳ್ಳುತ್ತೇನೆ ಅಥವಾ ಯಾವುದೇ ಶಿಕ್ಷೆಯನ್ನು ಎದುರಿಸಲು ಸಿದ್ಧನಿದ್ದೇನೆ' ಎಂದು ಸಿಂಗ್ ಹೇಳಿದ್ದಾರೆ.
ಇದೇ ವೇಳೆ ತನ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಯಾವುದೇ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬ್ರಿಜ್‌ಭೂಷಣ್ ಸವಾಲು ಹಾಕಿದ್ದಾರೆ.
ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದ್ದಾರೆ.
ಸಿಂಗ್ ಬಂಧನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ, ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದ ಕುಸ್ತಿಪಟುಗಳು, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ. ನಂತರ, ಕುಸ್ತಿಪಟುಗಳಿಂದ ಪದಕಗಳನ್ನು ಟಿಕಾಯತ್ ಸಂಗ್ರಹಿಸಿದ್ದಾರೆ.
ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಪೋಗಟ್, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ 'ಹರ್ ಕಿ ಪೌರಿ' ಘಾಟ್ ತಲುಪಿದ್ದರು. ಈ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.