ನವದೆಹಲಿ: 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಂಗಳವಾರ ಪ್ರಕಟಿಸಿದ್ದು, ಇಶಿತಾ ಕಿಶೋರ್ ಎಂಬುವವರು ಮೊದಲ ರ್‍ಯಾಂಕ್ ಪಡೆದಿದ್ದಾರೆ. ಗರಿಮಾ ಲೋಹಿಯಾ ಮತ್ತು ಉಮಾ ಹರಿತಿ ಎನ್. ಎಂಬುವವರು ಕ್ರಮವಾಗಿ ಎರಡು ಮತ್ತು ಮೂರನೇ ರ್‍ಯಾಂಕ್ ಗಳಿಸಿದ್ದಾರೆ. ಈ ಮೂಲಕ ಮೊದಲ ನಾಲ್ಕು ರ್‍ಯಾಂಕ್‌ಗಳು ಮಹಿಳಾ ಅಭ್ಯರ್ಥಿಗಳ ಪಾಲಾಗಿವೆ.
ನಾಗರಿಕ ಸೇವಾ ಪರೀಕ್ಷೆಯಲ್ಲಿ 933 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಯುಪಿಎಸ್‌ಸಿ ಹೇಳಿದೆ.
ನಾಗರಿಕ ಸೇವೆಗಳ ಪರೀಕ್ಷೆಯನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತದೆ (ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ). ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್)ಗೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ.