ನವದೆಹಲಿ: ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸಿದ್ದು, ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಅಧಿಕಾರ ಇರಬೇಕು ಎಂದು ತೀರ್ಪು ನೀಡಿದೆ.
ನವದೆಹಲಿ: ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸಿದ್ದು, ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ವಿಷಯಗಳ ಬಗ್ಗೆ ಅಧಿಕಾರ ಇರಬೇಕು ಎಂದು ತೀರ್ಪು ನೀಡಿದೆ.
ಆ ಮೂಲಕ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರದ ನಡುವಣ ಹಗ್ಗ ಜಗ್ಗಾಟದಲ್ಲಿ ಆಮ್ ಆದ್ಮಿ ಸರ್ಕಾರದ ಕೈ ಮೇಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಸಂಬಂಧ ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ಉಂಟಾಗಿದ್ದ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ಐವರು ನ್ಯಾಯಮೂರ್ತಿಗಳಿದ್ದ ಸಂವಿಧಾನಿಕ ಪೀಠ, ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ಆಡಳಿತಾತ್ಮಕ ವಿಷಯಗಳ ಬಗ್ಗೆ ನಿಯಂತ್ರಣ ಇರಬೇಕು ಎಂದು ಸರ್ವಾನುಮತದ ತೀರ್ಪು ನೀಡಿದೆ.
ದೆಹಲಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣವನ್ನು ಹೊಂದಿರಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅದರ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ತಮ್ಮ ಇಚ್ಛೆಯನ್ನು ಪ್ರತಿನಿಧಿಸಲು ಹಾಗೂ ಕಾನೂನು ರೂಪಿಸಲು ದೆಹಲಿ ವಿಧಾನಸಭೆಗೆ ಜನರು ಅಧಿಕಾರ ನೀಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
'ಒಂದು ವೇಳೆ ಅಧಿಕಾರಿಗಳು ಸಚಿವರಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಅಧಿಕಾರಿಗಳು ಪಾಲಿಸದಿದ್ದರೆ, ಅದು ಸಾಮೂಹಿಕ ಜವಾಬ್ದಾರಿಯ ತತ್ವದ ಮೇಲೆ ಪರಿಣಾಮ ಬೀರುತ್ತದೆ' ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತೀರ್ಪನ್ನು ಓದುವಾಗ ಹೇಳಿದರು.
ಪ್ರಜಾಸತಾತ್ಮಕವಾಗಿ ಆಯ್ಕೆಯಾದ ಸರ್ಕಾರಕ್ಕೆ ಅಧಿಕಾರಿಗಳನ್ನು ನಿಯಂತ್ರಿಸಲು ಬಿಡದಿದ್ದರೆ ಹಾಗೂ ಅವರನ್ನು ಜವಾಬ್ದಾರರನ್ನಾಗಿ ಮಾಡದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರಿಗೆ ಸರ್ಕಾರದ ಜವಾಬ್ದಾರಿಯನ್ನು ದುರ್ಬಲಗೊಳಿಸುತ್ತದೆ' ಎಂದು ಸುಪ್ರೀಂ ಕೋರ್ಟ್ ಹೇಳಿದೆ.