ಪಾಟ್ನಾ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, 50 ವಿದ್ಯಾರ್ಥಿಗಳನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಗಾಹಾದ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರಾಮದಲ್ಲಿ ಲಭ್ಯವಿದ್ದ ಖಾಸಗಿ ವಾಹನಗಳು ಹಾಗೂ ಆಂಬ್ಯುಲೆನ್ಸ್‌ಗಳ ಮೂಲಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಬಗಾಹಾ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ .
ಅಸ್ವಸ್ಥ ವಿದ್ಯಾರ್ಥಿಗಳ ಪೋಷಕರು ಶಾಲಾ ಆಡಳಿತ ಮಂಡಳಿ ಮತ್ತು ಬಿಸಿಯೂಟ ಪೂರೈಸುವ ಎನ್‌ಜಿಒ ವಿರುದ್ಧ ಪ್ರತಿಭಟನೆ ನಡೆಸಿದರು.
ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ. ಎನ್‌ಜಿಒ ವಿರುದ್ಧ ಅಪರಾಧ ಸಾಬೀತಾದರೆ ಅದನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ ,ಅಲ್ಲದೇ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಗಾಹ ಎಸ್‌ಡಿಎಂ ಡಾ. ಅನುಪಮಾ ಸಿಂಗ್ ಹೇಳಿದರು.