ಕುರುಕ್ಷೇತ್ರ(PTI): ಸೂರ್ಯಕಾಂತಿ ಬೀಜಕ್ಕೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಎರಡನೇ ದಿನವಾದ ಮಂಗಳವಾರವೂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದರು.
ನಮ್ಮ ಬೇಡಿಕೆಗಳನ್ನು ಈಡೇರಿಸಿ ಅಥವಾ ರೈತರನ್ನು ಜೈಲಿಗೆ ಹಾಕಿ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ರಾಜ್ಯ ಸರ್ಕಾರವನ್ನು ಕೋರಿದ್ದಾರೆ.
'ಸೋಮವಾರದಿಂದ ಜಿಲ್ಲಾಡಳಿತದ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆದಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ' ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು ತಿಳಿಸಿದ್ದಾರೆ.
ದೆಹಲಿ-ಚಂಡೀಗಢ ನಡುವಿನ ರಾಷ್ಟ್ರೀಯ ಹೆದ್ದಾರಿ -44ರಲ್ಲಿ ರೈತರು ವಾಹನ ಸಂಚಾರ ತಡೆದಿರುವುದರಿಂದ ವಾಹನಗಳು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಿವೆ ಎಂದು ಮೂಲಗಳು ತಿಳಿಸಿವೆ.
ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಪ್ರತಿಭಟನನಿರತ ರೈತರು ಹೆದ್ದಾರಿಯಲ್ಲಿ ಟೆಂಟ್‌ಗಳನ್ನು ನಿರ್ಮಿಸಿದ್ದಾರೆ ಎಂದೂ ಹೇಳಿವೆ.
ಈಚೆಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದ ಒಂಬತ್ತು ಮಂದಿ ರೈತ ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದೂ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯುಂಟು ಮಾಡದಂತೆ ರೈತರ ಮನವೊಲಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಈ ಕಾರ್ಯದಲ್ಲಿ ಅದು ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎಸ್. ಭೋರಿಯಾ ಹೇಳಿದ್ದಾರೆ.
ಹೆದ್ದಾರಿಯಲ್ಲಿ ತಡೆಯುಂಟು ಮಾಡಿದ್ದಕ್ಕೆ ಪ್ರತಿಭಟನಕಾರರ ವಿರುದ್ಧ ಹೊಸದಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ವಿವರಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ಧಾನ್ಯ ಮಾರುಕಟ್ಟೆ ಪ್ರದೇಶದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದಿದ್ದಾರೆ.