ತಿರುವನಂತಪುರಂ: ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಸಾಂಕ್ರಾಮಿಕ ಜ್ವರದಲ್ಲಿ ಅಸಾಮಾನ್ಯ ಏರಿಕೆ ದಾಖಲಾಗಲಿದೆ ಎಂದು ವೈದ್ಯರ ತಂಡ ಎಚ್ಚರಿಕೆ ನೀಡಿದೆ.
ಸರ್ಕಾರಿ ಆಸ್ಪತ್ರೆಗಳು ಜ್ವರ ಪೀಡಿತರಿಂದ ತುಂಬಿ ತುಳುಕುತ್ತಿದ್ದು, ತುರ್ತಾಗಿ ಹೆಚ್ಚಿನ ಆರೋಗ್ಯ ಕಾರ್ಯಕರ್ತರನ್ನು ನೇಮಿಸಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ. ವೈದ್ಯರ ಸಂಘಟನೆ ಕೆಜಿಎಂಒಎ ಈ ಬೇಡಿಕೆಗೆ ಮುಂದಾಗಿದೆ.
ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ವೈದ್ಯಕೀಯ ಕಾಲೇಜುಗಳ ವರೆಗೆ ರೋಗಿಗಳಿಂದ ತುಂಬಿ ತುಳುಕುತ್ತಿವೆ. ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಸಾಂಕ್ರಾಮಿಕ ಜ್ವರ ಹರಡಿದೆ. ಜ್ವರ ಬಾಧೆಯಿಂದ ಅನೇಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯರು ಮತ್ತು ನರ್ಸ್‍ಗಳಿಲ್ಲ ಎಂಬ ದೂರು ಹೆಚ್ಚುತ್ತಿದೆ.
ಆಸ್ಪತ್ರೆಗಳಲ್ಲಿ ಹೆಚ್ಚಿನ ಜ್ವರ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಯಿತು. ಆದರೆ ಅದು ಪ್ರಯೋಜನವಾಗಲಿಲ್ಲ. ವಿವಿಧ ಕೌಂಟರ್‍ಗಳ ಮುಂದೆ ರೋಗಿಗಳು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಅನೇಕ ವಯೋವೃದ್ಧರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ವೈದ್ಯರ ಕೊರತೆ ನೀಗದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ. ರಾಜ್ಯದಲ್ಲಿ ಪ್ರತಿದಿನ ಸುಮಾರು 12,000 ಜನರು ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.