ಕೋಲ್ಕತ್ತಾ: ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯ ಭಂಗೋರ್‌ನಲ್ಲಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದರೆ, ಉತ್ತರ ದಿನಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಯುವಕನನ್ನು ಗುಂಡಿಕ್ಕಿ ಕೊಂದಿದ್ದಾರೆ.
ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ತಡೆಯುತ್ತಿದ್ದು, ಹಿಂಸಾಚಾರ ನಡೆಸಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಆದರೆ ಬುಧವಾರದವರೆಗೆ ಆಡಳಿತ ಪಕ್ಷದ ಅಭ್ಯರ್ಥಿಗಳಿಗಿಂತ ಹೆಚ್ಚು ವಿರೋಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.