ಇಂಫಾಲ್: ಕಳೆದ ತಿಂಗಳು ತೀವ್ರ ಹಿಂಸಾಚಾರ, ಪ್ರತಿಭಟನೆಗಳಿಂದ ತತ್ತರಿಸಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕೆಲ ದಿನಗಳಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದರೆ, ಸೋಮವಾರ ಬೆಳಗ್ಗೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಕಾಂಗ್‌ಚುಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಗಾಯಗೊಂಡವರನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪುರದಲ್ಲಿ 80 ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಇತ್ತೀಚಿನ ಸರಣಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಗುವಾಹಟಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಯ್ ಲಂಬಾ ನೇತೃತ್ವದ ತನಿಖಾ ಆಯೋಗವನ್ನು ಕೇಂದ್ರವು ಭಾನುವಾರ ರಚಿಸಿದೆ.
ಮೇ 3 ರಂದು ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಮಣಿಪುರದ ಅಲ್ಲಲ್ಲಿ ಹಿಂಸಾಚಾರ ನಡೆಯುತ್ತಲೇ ಇದೆ. ಘರ್ಷಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 80 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.