ನವದೆಹಲಿ: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಕುರಿತು ರೈಲ್ವೆ ಇಲಾಖೆ ಉನ್ನತ ಮಟ್ಟದ ತನಿಖೆ ಆರಂಭಿಸಿದ್ದು, ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ರೈಲ್ವೆ ಸುರಕ್ಷತಾ ಆಯುಕ್ತರು ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕೆಲಸ ಮಾಡುತ್ತಾರೆ ಮತ್ತು ಇಂತಹ ಎಲ್ಲಾ ಅಪಘಾತಗಳನ್ನು ತನಿಖೆ ನಡೆಸುತ್ತಾರೆ.
"SE ಸರ್ಕಲ್ ಸಿಆರ್ ಎಸ್, ಎ.ಎಂ. ಚೌಧರಿ ಅವರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಾರೆ" ಎಂದು ಭಾರತೀಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.
ಶುಕ್ರವಾರ ಸಂಭವಿಸಿದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನ ಸಾವನ್ನಪ್ಪಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಅಪಘಾತಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲವಾದರೂ, ಸಿಗ್ನಲಿಂಗ್ ವೈಫಲ್ಯವೇ ಈ ಅಪಘಾತಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. "ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ಮಾರ್ಗದಲ್ಲಿ ಕವಚ ಲಭ್ಯವಿಲ್ಲ" ಎಂದು ಭಾರತೀಯ ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಅವರು ತಿಳಿಸಿದ್ದಾರೆ.