ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮಂಡಿ -ಕುಲ್ಲುವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
15 ಕಿ.ಮೀ ಉದ್ದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಜತೆಗೆ ಹೋಟೆಲ್‌ಗಳಲ್ಲಿ ರೂಮ್‌ಗಳು ಸಿಗದೆ 200ಕ್ಕೂ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗುಡ್ಡಗಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಭಾನುವಾರ ಸಂಜೆಯಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು.
ರಸ್ತೆಗೆ ಉರುಳಿದ ಬೃಹತ್ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ಬಳಸಲಾಗುತ್ತಿದೆ. ಏಳರಿಂದ ಎಂಟು ಗಂಟೆಗಳ ನಂತರ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ 'ಪಿಟಿಐ' ವರದಿ ತಿಳಿಸಿದೆ.
ಚಂಡೀಗಢ-ಮನಾಲಿ ಹೆದ್ದಾರಿಯಲ್ಲೂ ಕೂಡ ಬಂಡೆಗಳು ಉರುಳಿದ್ದು, ಅವುಗಳನ್ನು ತೆರವುಗೊಳಿಸಲು ರಾಜ್ಯ ವಿಪತ್ತು ನಿರ್ವಹಣಾ ಘಟಕ ಕಾರ್ಯಾಚರಣೆ ನಡೆಸುತ್ತಿದೆ.