ನವದೆಹಲಿ: ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 'ವಿರೋಧ ಪಕ್ಷಗಳ ಸಭೆ'ಯಲ್ಲಿ 26 ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 'ವಿರೋಧ ಪಕ್ಷಗಳ ಸಭೆ'ಯಲ್ಲಿ 26 ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಹೊರಡಿಸಿರುವ ಸುಗ್ರೀವಾಜ್ಞೆಗೆ ಸಂಸತ್‌ನಲ್ಲಿ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ ಬೆನ್ನಲ್ಲೇ ಎಎಪಿ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.
ಜೂನ್ 23ರಂದು ಬಿಹಾರದ ಪಾಟ್ನಾದಲ್ಲಿ ಸಭೆ ನಡೆದಿದ್ದು, 15 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಎಎಪಿ ಈ ಸಭೆಗೆ ಗೈರಾಗಿತ್ತು. ಈ ಬಾರಿ 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
'ಬಿಜೆಪಿಯನ್ನು ಸೋಲಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಬೆಂಗಳೂರು ಸಮಾವೇಶವು ಮತ್ತೊಂದು ಹೆಜ್ಜೆಯಾಗಿದೆ' ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜ ತಿಳಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳು ಈ ಸಭೆಯಲ್ಲಿ ಕಾರ್ಯತಂತ್ರವನ್ನು ರೂಪಿಸಲಿವೆ.